ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಣೆ ಮಾಡಿದ “ಸಿಎಂ ಸಿದ್ಧರಾಮಯ್ಯ”…

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಕನ್ನಡದ ಅಸ್ಮಿತೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಬುಧವಾರ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್, ಕುಡಿಯುವ ನೀರು ಸರಬರಾಜು ಮಾಡಲಾಗುವುದು. ಕೇಂದ್ರ ಸರ್ಕಾರವು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿಯೂ ಅವಕಾಶ ನೀಡುವಂತೆ ಹಿಂದೆಯೂ ನಾನು ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಕೇಂದ್ರ ಸರ್ಕಾರಕ್ಕೆ ಮತ್ತೆ ಪತ್ರ ಬರೆದು ಒತ್ತಾಯಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.