ಪ್ರಲ್ಹಾದ ಜೋಶಿಯವರ ಮನವಿಗೆ ಸ್ಪಂದನೆ: ಹುಬ್ಬಳ್ಳಿ-ಪುಣೆ ಶೀಘ್ರ ವಂದೇ ಭಾರತ ರೈಲು ಆರಂಭ…
1 min readರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು
ಶೀಘ್ರದಲ್ಲೇ ಹುಬ್ಬಳ್ಳಿ – ಪುಣೆ ಮಧ್ಯೆ ವಂದೇ ಭಾರತ್ ಎರಡನೇ ರೈಲು ಸಂಚಾರ ಆರಂಭ
ರೈಲ್ವೆ ಸಚಿವ ಅಶ್ವಿನಿ ವಷ್ಣವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಗದೊಂದು ಕೊಡುಗೆ ನೀಡಿದೆ. ಅದೇ ವಂದೇ ಭಾರತ್ ರೈಲು!
ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ — ಪುಣೆ ಮಧ್ಯೆ ಎರಡನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ.
ಅತಿ ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ.
ವಂದೇ ಭಾರತ್ ಗೆ ಮನವಿ ಮಾಡಿದ್ದರು ಜೋಶಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು.
ರಾಜ್ಯದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.
ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು.
ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ಉದ್ಘಾಟನೆ ದಿನ, ವೇಳಾಪಟ್ಟಿ ಶೀಘ್ರ ಪ್ರಕಟ: ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಆದಷ್ಟು ಬೇಗ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಪ್ರಧಾನಿಗೆ, ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ: ನಮ್ಮ ವಿಭಾಗದ ರೇಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ.