ನಾಳೆಯ ಬಂದ್ ಗೆ ಆಮ್ ಆದ್ಮಿ ಬೆಂಬಲ: ಜಿಲ್ಲಾಧ್ಯಕ್ಷ ಸಂತೋಷ ನರಗುಂದ
ಹುಬ್ಬಳ್ಳಿ: ರೈತ, ಕಾರ್ಮಿಕ ಹಾಗೂ ಜನಪರ ಸಂಘಟನೆಗಳು ಹುಬ್ಬಳ್ಳಿಯ ಅಮರಗೋಳದ ಎಪಿಎಂಸಿ ವ್ಯಾಪಾರಸ್ಥರ ಸಂಘದ ಸಭಾ ಭವನದಲ್ಲಿಂದು ಚಿಂತನಾ ಸಮಾವೇಶ ಹಮ್ಮಿಕೊಂಡಿತ್ತು. ಅದರಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಪಿಎಂಸಿ, ಭೂ ಸುಧಾರಣಾ ಕಾರ್ಮಿಕ ಕಾನೂನುಗಳ ತಿದ್ದುಪಡಿ ತರುವ ಮೂಲಕ ಭಾರತದ ಏಕೈಕ ಆಶಾಕಿರಣವಾದ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿರುವುದು ದುರಂತ. ಕೃಷಿಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಪ್ರಮುಖ ಮಸೂದೆಗಳ ಬಗ್ಗೆ ಉಭಯ ಸದನಗಳಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಮಸೂದೆಗಳನ್ನು ಆಯ್ಕೆ ಸಮಿತಿಯ ಪರಿಶೀಲನೆಗೊಳಪಡಿಸಬೇಕು ಎಂಬ ವಿರೋಧಪಕ್ಷಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿರುವುದು ಯಾಕೆ? ಎಂದು ಪ್ರಶ್ನಿಸಿದರು.
ದುರ್ಬಲರು, ಅಸಹಾಯಕರು ಮತ್ತು ಅಸಂಘಟಿತರಾಗಿರುವ ಶೇಕಡಾ 80ರಷ್ಟಿರುವ ಸಣ್ಣ ಮತ್ತು ಮಧ್ಯಮ ರೈತರಿಗೆ ಕೃಷಿಮಾರುಕಟ್ಟೆಯನ್ನು ಸರ್ಕಾರದ ನೆರವಿಲ್ಲದೆ ಸ್ವಯಂನಿಯಂತ್ರಿಸಲಾರರು. ಆ ಕೆಲಸ ಮಾಡುತ್ತಿದ್ದ ಎಪಿಎಂಸಿಯನ್ನು ನಾಶಮಾಡುವುದೆಂದರೆ ಪೂರ್ಣ ಕೃಷಿಕ್ಷೇತ್ರವನ್ನು ಮಣ್ಣುಪಾಲು ಮಾಡುವುದು ಎಂದರ್ಥ. ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಯ ದುರುದ್ದೇಶ. ಇದು ನಮ್ಮ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರ ಬೆನ್ನು ಮುರಿಯುವ ಕೆಲಸ ಎಂದು ದೂರಿದರು.
ಕೇಂದ್ರ ಸರ್ಕಾರದ ಹೊಸ ತಿದ್ದುಪಡಿ ಕಾನೂನಿನಲ್ಲಿ ಬೆಂಬಲ ಬೆಲೆಯ ರಕ್ಷಣೆಯನ್ನು ಕಿತ್ತೊಗೆದು ರೈತರನ್ನು ಅನಾಥರನ್ನಾಗಿ ಮಾಡಲಾಗಿದೆ. ಅಲ್ಲದೇ ಪ್ರಸ್ತುತ ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ರೈತರ ಹಿತಾಸಕ್ತಿ ರಕ್ಷಣೆಗೆ ಬದ್ಧವಾಗಿದೆ ಎಂದಿರುವ ಅವರು, ಸೆಕ್ಷನ್ 8 ರ ಪ್ರಕಾರ ‘’ಎಪಿಎಂಸಿ ಮಾರುಕಟ್ಟೆ ಯಾರ್ಡ್ ಒಳಗೆ ಇಲ್ಲವೆ ಹೊರಗೆ ಯಾರೂ ಕೂಡಾ ಅಧಿಕೃತ ಲೈಸೆನ್ಸ್ ಇಲ್ಲದೆ ವ್ಯಾಪಾರ ನಡೆಸುವಂತಿಲ್ಲ’’. ಇದಕ್ಕೆ ತಿದ್ದುಪಡಿ ಮಾಡಲಾಗಿದೆ. ಸೆಕ್ಷನ್ 66 ಮತ್ತು 67ರ ಪ್ರಕಾರ ಯಾರ್ಡ್ ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಅಕ್ರಮ ವ್ಯಾಪಾರ, ಕಾಳಸಂತೆ ಮತ್ತು ಅಕ್ರಮ ದಾಸ್ತಾನು ನಿಯಂತ್ರಿಸಲು ಅವಕಾಶವಿದೆ. ಈಸೆಕ್ಷನ್ ಗೂ ತಿದ್ದುಪಡಿ ಮಾಡಲಾಗಿದೆ. ರೈತರಿಗೆ ನ್ಯಾಯಬದ್ಧ ಬೆಲೆ ಸಿಗುವಂತೆ ಮಾಡಲು ಖಾಸಗಿ ಸಂಸ್ಥೆಗಳ ಲೆಕ್ಕಪತ್ರ ಪರಿಶೀಲಿಸಬಹುದು. ಸೆಕ್ಷನ್ 114,116 ಮತ್ತು 117ರಡಿಯಲ್ಲಿ ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಇದೆ. ಈ ಆರೂ ಸೆಕ್ಷನ್ ಗಳನ್ನು ತಿದ್ದುಪಡಿ ಮೂಲಕ ಬದಲಾಯಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಧರಿಸಿವೆ. ಈ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳು ಕಾಯ್ದೆ ತಿದ್ದುಪಡಿ ಮೂಲಕ ಮೀಸೆ ತುರುಕಿಸಿ ಒಳಪ್ರವೇಶಿಸಿದರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಅಪ್ರಸ್ತುತ ಗೊಳಿಸಿ, ನಾಶ ಮಾಡಲು ಬಹಳ ದಿನಗಳು ಬೇಕಾಗಲಾರದು. ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ. ಈ ಮೂಲಕ ಮಾರುಕಟ್ಟೆಯನ್ನು ತಮ್ಮ ನಿಯಂತ್ರಣಕ್ಕೆ ಪಡೆದು ನಿಧಾನವಾಗಿ ಎಪಿಎಂಸಿಗಳನ್ನು ಅಪ್ರಸ್ತುತಗೊಳಿಸುವುದು ಇದರ ಹಿಂದಿನ ನಿಜವಾದ ದುರುದ್ದೇಶ ಎನ್ನುವುದನ್ನು ರೈತರು ಅರ್ಥಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ರೈತ, ಕಾರ್ಮಿಕ ಹಾಗೂ ಜನಪರ ಸಂಘಟನೆಗಳು ಒಂದಾಗಿ ಕಾಯಿದೆಯನ್ನು ತೀವ್ರವಾಗಿ ವಿರೋಧಿಸಬೇಕು. ಈ ಹಿನ್ನೆಲೆಯಲ್ಲಿ ರೈತ ವಿರೋಧಿ ಕಾಯಿದೆ ವಿರೋಧಿಸಿ ನಾಳೆ ನಡೆಯಲಿರುವ ಸ್ವಯಂ ಪ್ರೇರಿತವಾದ ಬಂದ್ ಗೆ ಆಮ್ ಆದ್ಮಿ ಪಕ್ಷ ಬೆಂಬಲ ಸೂಚಿಸಲಿದೆ ಎಂದರು.