ಮುಂದಿನ ವರ್ಷದಿಂದ ವಸತಿ ಶಾಲೆಗಳ ಮೇಲ್ದರ್ಜೆಗೆ ಕ್ರಮ: ಗೋವಿಂದ ಕಾರಜೋಳ
ಬಾಗಲಕೋಟೆ: ಮುಂದಿನ ಶೈಕ್ಷಣಿಕ ವರ್ಷದಿಂದ ಸ್ವಂತ ಕಟ್ಟಡಗಳಿರುವ ವಸತಿ ಶಾಲೆಗಳಲ್ಲಿ ಪಿಯುಸಿ ವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ಬಾಗಲಕೋಟೆಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ 67ವಸತಿ ಶಾಲೆಗಳಲ್ಲಿ ಪಿಯುಸಿವರೆಗೆ ಮೇಲ್ದರ್ಜೆಗೇರಿಸಲಾಗಿದೆ. ಪ್ರಸಕ್ತ ವರ್ಷದಿಂದ ಸ್ವಂತ ಕಟ್ಟಡಗಳಿರುವ ಎಲ್ಲಾ ವಸತಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವಂತೆ ಈ ಹಿಂದೆ ಘೋಷಿಸಲಾಗಿತ್ತು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಪ್ರಾರಂಭಿಸಲಾಗುವುದು. ರಾಜ್ಯದಲ್ಲಿ 824 ವಸತಿ ಶಾಲೆಗಳಿದ್ದು, 1.70 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 464 ವಸತಿ ಶಾಲೆಗಳು ಸ್ವಂತ ಕಟ್ಟಡಗಳನ್ನು ಹೊಂದಿವೆ. 2019-20 ನೇ ಸಾಲಿನಲ್ಲಿ 47 ,ವಸತಿ ಶಾಲೆಗಳ ಕಟ್ಟೆಗಳನ್ನು ಪೂರ್ಣಗೊಳಿಸಿ, ಇಲಾಖೆಗೆ ಹಸ್ತಾಂತರಿಸಲಾಗಿದೆ. 2020-21 ನೇ ಸಾಲಿನಲ್ಲಿ 2450 ಕೋಟಿ ರೂ ವೆಚ್ಚದಲ್ಲಿ 181 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಮಾಡಲಾಗುವುದು. ಮುಂದಿನ 2 ವರ್ಷಗಳಲ್ಲಿ ಎಲ್ಲಾ ವಸತಿ ಶಾಲೆಗಳು ಸ್ವಂತ ಕಟ್ಟಡ ಹೊಂದುವಂತೆ ಕ್ರಮಕೈಗೊಳ್ಳಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ 30 ವಸತಿ ಶಾಲೆಗಳಿವೆ. ಅದರಲ್ಲಿ 15 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಗಳಿವೆ. 25ಕೋಟಿ ರೂ ವೆಚ್ವದಲ್ಲಿ ವಸತಿ ಶಾಲೆಗಳ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು. ಸಂದರ್ಭದಲ್ಲಿ ಡಿಸಿಎಂ ಲಕ್ಷಣ ಸವದಿ, ಸಂಸದ ಪಿ.ಸಿ.ಗದ್ದಿಗೌಡರ್, ಶಾಸಕರುಗಳು ಉಪಸ್ಥಿತರಿದ್ದರು.