Posts Slider

Karnataka Voice

Latest Kannada News

ಜಿಲ್ಲಾಧಿಕಾರಿಗಳು ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಬೇಕು: ಬಿ.ಎಸ್.ಯಡಿಯೂರಪ್ಪ ಆದೇಶ

1 min read
Spread the love

ಬೆಂಗಳೂರು: ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ತಾಲ್ಲೂಕುಗಳನ್ನು ವಿಭಾಗಿಸಿಕೊಂಡು ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಆದೇಶಿಸಿದರು.

ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಇಂದು ಕಲಬುರ್ಗಿ,ವಿಜಯಪುರ, ಉಡುಪಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡುತ್ತಿದ್ದರು.

ತಾಲ್ಲೂಕು ಕೇಂದ್ರಗಳಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದ ಮುಖ್ಯಮಂತ್ರಿಗಳು  ಜೂನ್ 08 ರಿಂದ ಸಡಲಿಕೆಗಳನ್ನು ಮಾಡುತ್ತಿರುವುದರಿಂದ  ಕಟ್ಟೆಚ್ಚರ ವಹಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಮಹಾರಾಷ್ಟ್ರ ದಿಂದ ಆಗಮಿಸುತ್ತಿರುವ ವಲಸಿಗರಿಂದ  ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಕೋವಿಡ್ 19 ಪರೀಕ್ಷಾ ಕಿಟ್‍ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು.  ಗೃಹ ಬಂಧನದಲ್ಲಿದ್ದವರು (ಹೋಮ್ ಕ್ವಾರಂಟೈನ್) ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕು.  ಪೋಲೀಸ್ ಇಲಾಖೆ ವತಿಯಿಂದ ಗೃಹ ಬಂಧನದಲ್ಲಿರುವವರ ಮನೆಯ ಬಳಿ ಪೇದೆಗಳನ್ನು ನಿಯೋಜಿಬೇಕಲ್ಲದೆ. ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಇವರ ಬಗ್ಗೆ ನಿಗಾ ವಹಿಸಬೇಕು. ಗ್ರಾಮ ಪಂಚಾಯತಿಗಳ ಸದಸ್ಯರಿಗೆ ಈ ಬಗ್ಗೆ ತರಬೇತಿಯನ್ನೂ  ನೀಡಲಾಗಿದ್ದು,  ಬೂತ್ ಮಟ್ಟದ ತಂಡಗಳೂ ಪ್ರತಿ ದಿನ ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪ್ರತಿ ಗ್ರಾಮ ಹಾಗೂ  ನಗರಗಳಲ್ಲಿ ವಾರ್ಡ್ ಮಟ್ಟದಲ್ಲಿ ಕಾವಲು ಸಮಿತಿಗಳನ್ನು ರಚಿಸಬೇಕಲ್ಲದೆ,  ಈ ಸಮಿತಿಗಳು  ಕ್ರಿಯಾಶೀಲವಾಗಿದ್ದು,  ಹೋಮ್ ಕ್ವಾರಂಟೈನ್ ಉಲ್ಲಂಘನೆಯಾದರೆ ಎಫ್.ಐ.ಆರ್ ದಾಖಲಿಸಬೇಕು ಎಂದು ನಿರ್ದೇಶಿಸಿದರು.

ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ  ಪ್ರದೇಶಗಳನ್ನು ಕಾಯ್ದು,  ಅಕ್ರಮ ಪ್ರವೇಶವನ್ನು ತಡೆಯಬೇಕು.  ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿದರು.

ಎಸ್.ಎಸ್.ಎಲ್.ಸಿ / ಪಿ.ಯು.ಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್,  ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *