ಇಂದು ಸಂಜೆಯಿಂದ್ಲೇ ಹೊರಗೆ ಬರಬೇಡಿ: ಬಂದ್ರೇ ಬೀಳತ್ತೆ ದಂಡ: ಧಾರವಾಡ ಜಿಲ್ಲಾಧಿಕಾರಿ ಆದೇಶ
1 min readಧಾರವಾಡ: ಕೊರೋನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ರವಿವಾರ ಮೇ.31 ರಂದು ಜಿಲ್ಲೆಯಾದ್ಯಂತ ಸಿ ಆರ್ ಪಿ ಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಮೇ.30 ರ ಸಾಯಂಕಾಲ 7 ಗಂಟೆಯಿಂದ ಜೂನ್ 1ರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ , ಕ್ರೀಡಾಕೂಟ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು , ಮೆರವಣಿಗೆ , ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತು ಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ. ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರ ಕಾರ್ಯದಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.
ಸರಕಾರಿ ವಾಹನಗಳಿಗೆ ಮತ್ತು ಕೋವಿಡ್ -19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಈ ಅವಧಿಯಲ್ಲಿ ಕಿರಾಣಿ ಅಂಗಡಿಗಳು, ತರಕಾರಿ ಅಂಗಡಿಗಳು, ಹಾಲು ಮೊಸರು, ಚಿಕನ್, ಮಟನ್ ಹಾಗೂ ಇತರೆ ಅವಶ್ಯಕ ವಸ್ತುಗಳ ಸೇವೆಗಳು ಲಭ್ಯವಿರುತ್ತವೆ. ಹೋಟೆಲ್ ಗಳು ಪಾರ್ಸೆಲ್ ಸೇವೆ ಮಾತ್ರ ನೀಡಬಹುದು.
ಹುಬ್ಬಳ್ಳಿ ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಕಾರ್ಮಿಕರಿಗೆ ರೈಲು ನಿಯೋಜಿತವಾಗಿರುವದರಿಂದ ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಪ್ರಯಾಣ ಮಾಡಲು ಆಗಮಿಸುವ ವಲಸೆ ಕಾರ್ಮಿಕರಿಗೆ ಹಾಗೂ ವಲಸೆ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತಹ ವ್ಯಕ್ತಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.