ಧಾರವಾಡ ಗ್ರಾಮೀಣ ಪ್ರದೇಶದಲ್ಲೂ ನಿಷೇಧಾಜ್ಞೆ ಜಾರಿ- ಉದ್ರೇಕಕಾರಿ ಹಾಡುಗಳಿಗೂ ನಿರ್ಬಂಧ

*ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ*
ಧಾರವಾಡ: ನಾಳೆ ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ ಜರುಗುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮತೀಯ ಸೌಹಾರ್ದತೆ, ಕಾನೂನು, ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಅಗಸ್ಟ್ 4 ರ ಮಧ್ಯರಾತ್ರಿ 12 ಗಂಟೆಯಿಂದ ಅಗಸ್ಟ್ 6 ರ ಬೆಳಿಗ್ಗೆ 6 ಗಂಟೆಯವರೆಗೆ ಸಿ ಆರ್ ಪಿ ಸಿ 1973 ರ ಕಲಂ 144 ರನ್ವಯ ಪ್ರತಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಆಯೋಜಿಸುವುದು, ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, ಪ್ರಚೋದನಾತ್ಮಕ, ಉದ್ರೇಕಕಾರಿ ಹಾಡುಗಳು, ಕೂಗಾಟ, ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳನ್ನು ಪ್ರದರ್ಶಿಸುವದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಗಾಂಭೀರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಯಾವುದೇ ಚಟುವಟಿಕೆಗಳನ್ನು ಪ್ರತಿಬಂಧಿಸಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.