Karnataka Voice

Latest Kannada News

ರಾಜ್ಯದ “ಪ್ರಭಾವಿ ಸಿಎಂ” ಆಗಿದ್ದ ಎಸ್.ಎಂ.ಕೃಷ್ಣ ವಿಧಿವಶ…!!!

Spread the love

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಇಂದು (ಮಂಗಳವಾರ) ನಸುಕಿನ 2.45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಎಸ್​.ಎಂ.ಕೃಷ್ಣ ಜೀವನ : ಎಸ್.ಎಂ ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಇವರು 1932ರಲ್ಲಿ ಮದ್ದೂರು ತಾಲೂಕು, ಮಂಡ್ಯ ಜಿಲ್ಲೆಯಲ್ಲಿ ಜನಿಸಿದರು. ಕರ್ನಾಟಕದ ಅತ್ಯಂತ ಹಿರಿಯ ರಾಜಕಾರಣಿಯಾದ ಇವರು 1999ರಿಂದ 2004ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿದ್ದಾರೆ. ರಾಜ್ಯದ 19ನೇ ಮುಖ್ಯಮಂತ್ರಿಯಾಗಿ ಆಡಳಿತ ನಿರ್ವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಎಸ್​.ಎಂ.ಕೃಷ್ಣ ಅವರು ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಎಸ್.ಎಂ ಕೃಷ್ಣ ಅವರು 2017 ಮಾರ್ಚ್​ನಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು. ಇವರು 1989 ರಿಂದ 1992ರವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ಕೂಡ ಸೇವೆ ಸಲ್ಲಿಸಿದ್ದಾರೆ. 1971 ರಿಂದ 2014ರವರೆಗೆ ಜನಪ್ರತಿನಿಧಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ವಿಧಾನಸಭೆ, ಲೋಕಸಭೆ, ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಇವರಿಗೆ 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ.

ಎಸ್​.ಎಂ.ಕೃಷ್ಣ ಅವರ ಬಾಲ್ಯ ಹಾಗೂ ವಿದ್ಯಾಭ್ಯಾಸ : ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದ ಎಸ್​.ಎಂ.ಕೃಷ್ಣ ಅವರು ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ  ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ. ನಂತರ ಉನ್ನತ ವಿದ್ಯಾಭ್ಯಾಸಕ್ಕೆ ಅಮೆರಿಕಾಕ್ಕೆ ತೆರಳಿ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮುಂದುವರೆಸಿದ್ದರು. ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನ ಪಡೆದಿದ್ದರು.

ರಾಜಕೀಯ ಜೀವನ : ಶಿಕ್ಷಣದ ಬಳಿಕ ಅಮೆರಿಕಾದಿಂದ ಭಾರತಕ್ಕೆ ಮರಳಿದ ಎಸ್.ಎಂ ಕೃಷ್ಣ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಲೆಕ್ಚರರ್​ ಆಗಿದ್ದರು. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿ, 1968ರಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 1972ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆ ಆಗಿದ್ದರು. 1984ರಲ್ಲಿ ಹಣಕಾಸು ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. 1992 ರಿಂದ 1994ರವರೆಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು. 1996ರಲ್ಲಿ ರಾಜ್ಯಸಭೆಗೆ ನೇಮಕವಾಗಿದ್ದರು. ವಿಶ್ವಸಂಸ್ಥೆ, ಕಾಮನ್ ವೆಲ್ತ್ ಒಕ್ಕೂಟದಲ್ಲಿ ಭಾರತದ ಪ್ರತಿನಿಧಿಯಾಗಿದ್ದರು.


Spread the love

Leave a Reply

Your email address will not be published. Required fields are marked *