ಶೀಘ್ರದಲ್ಲಿ 1ರಿಂದ 8ನೇ ತರಗತಿ ಆರಂಭ: ಸಚಿವ ಸುರೇಶಕುಮಾರ
1 min readಬೆಂಗಳೂರು: ರಾಜ್ಯದಲ್ಲಿ ಈಗಾಗಲೇ 9, 10 ಹಾಗೂ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದ್ದು ಶೀಘ್ರದಲ್ಲೇ ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ತರಗತಿ ಆರಂಭಿಸುವ ಕುರಿತು ಫೆಬ್ರವರಿ ಎರಡನೇ ವಾರ ಇಲ್ಲವೇ ಮೂರನೇ ವಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪ್ರಾಥಮಿಕ ಶಾಲಾ ಮಕ್ಕಳನ್ನು ಶಾಲೆಗೆ ಆಹ್ವಾನಿಸುವ ಮೊದಲು ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಭೆ ನಡೆಸಿ ದೀರ್ಘವಾಗಿ ಚರ್ಚೆ ನಡೆಸಿದ ಬಳಿಕವೇ ಒಂದರಿಂದ ಎಂಟನೇ ತರಗತಿಗಳನ್ನುಪ್ರಾರಂಭಿಸುವ ಕುರಿತು ನಿರ್ಧಾರಕ್ಕೆ ಬರಲಾಗುವುದು ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ 9, 10 ಹಾಗೂ ಪಿಯುಸಿ (PUC) ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇಕಡ 80 ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಇದಲ್ಲದೆ 6ರಿಂದ ಎಂಟನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಲಿಕೆ ಮುಂದುವರೆದಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡರು.